ಉ.ಕ‌ ಸುದ್ದಿಜಾಲ ಚಿಕ್ಕೋಡಿ:

ಜನಗಣತಿ (ಸೆನ್ಸಸ್) ಪ್ರಕ್ರಿಯೆ ಪೂರ್ಣಗೊಂಡ ನಂತರ ಮುಂಬರುವ ರಾಜ್ಯ ಬಜೆಟ್‌ನಲ್ಲಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವ ನಿರೀಕ್ಷೆಯಿದೆ” ಎಂದು ಶಾಸಕ ಗಣೇಶ ಹುಕ್ಕೇರಿ ಭರವಸೆ ವ್ಯಕ್ತಪಡಿಸಿದರು.

ಚಿಕ್ಕೋಡಿ ಪಟ್ಟಣದ ಹಾಲಟ್ಟಿಯ ಶ್ರೀ ಮಹಾಲಕ್ಷ್ಮೀ ಸೊಸೈಟಿಯ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ರಚನೆಯ ಕುರಿತು ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದ್ದು, ಮುಂದಿನ ಬಜೆಟ್‌ನಲ್ಲಿ ಜಿಲ್ಲಾ ಘೋಷಣೆಯಾಗುವ ವಿಶ್ವಾಸವಿದೆ” ಎಂದು ತಿಳಿಸಿದರು.

“ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆಯಾದ ಬಳಿಕ ಈ ಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಘ-ಸಂಸ್ಥೆಗಳು ತಲೆ ಎತ್ತಬೇಕಿದೆ. ವಿಶೇಷವಾಗಿ ಚಿಕ್ಕೋಡಿಯಲ್ಲಿ ಆಯುರ್ವೇದ ಅಥವಾ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ಈ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿಯೂ ಪ್ರಯತ್ನಿಸಲಾಗುವುದು‌ ಎಂದು ಶಾಸಕರು ಹೇಳಿದರು.