ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಬಡಾವಣೆಗಳಲ್ಲಿ 378 ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಶ್ರದ್ಧೆಯಿಂದ ಧಾರ್ಮಿಕ ವಿಧಿವಿಧಾನ ಕೈಗೊಂಡ ಭಕ್ತರು, ಗುರುವಾರ ಏಕದಂತನಿಗೆ ವಿದಾಯ ಹೇಳಲು ಕಾತರರಾಗಿದ್ದಾರೆ. ಸೆಪ್ಟೆಂಬರ್ 28ರಂದು ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಬೆಳಗಾವಿ ನಗರದ ಇಲ್ಲಿನ ಹುತಾತ್ಮ ಚೌಕ್‌ನಲ್ಲಿ ಸಂಜೆ 4ಕ್ಕೆ ಮೂರ್ತಿಗಳ ಮೆರವಣಿಗೆಗೆ ಚಾಲನೆ ಸಿಗಲಿದೆ. ಅಲ್ಲಿಂದ ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಯಂಡೇಖೂಟ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಿರ್ಲೋಸ್ಕರ್ ರಸ್ತೆ, ರಾಮಲಿಂಗಖಿಂಡ್ ಗಲ್ಲಿ ರಸ್ತೆ, ಟಿಳಕ ಚೌಕ, ಹೆಮು ಕಲಾನಿ ಚೌಕ್, ಪಾಟೀಲ ಗಲ್ಲಿಯ ಶನಿ ಮಂದಿರ, ಕಪಿಲೇಶ್ವರ ರೈಲ್ವೆ ಮೇಲ್ಸೇತುವೆ ಮಾರ್ಗವಾಗಿ ಸಂಚರಿಸಿ, ಕಪಿಲೇಶ್ವರ ದೇವಸ್ಥಾನದ ಬಳಿ ಮೆರವಣಿಗೆ ಮುಕ್ತಾಯವಾಗಲಿದೆ.
ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದವರೆಗೂ ಮೆರವಣಿಗೆ ನಡೆಯುವ ಸಾಧ್ಯತೆಯಿದೆ. ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ಈ ಮಾರ್ಗಗಳಲ್ಲಿ ಪೊಲೀಸರು ಬುಧವಾರ ಪರೇಡ್ ನಡೆಸಿದರು.
ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಕಪಿಲೇಶ್ವರ ದೇವಸ್ಥಾನ ಬಳಿಯ ಹಳೆ ಮತ್ತು ಹೊಸ ಹೊಂಡ, ಜಕ್ಕೇರಿ ಹೊಂಡ, ಅನಗೋಳದ ಕೆರೆ ಸೇರಿದಂತೆ 8 ಕಡೆ ವ್ಯವಸ್ಥೆ ಮಾಡಿದ್ದೇವೆ. ಎಲ್ಲ ಹೊಂಡಗಳಿಗೆ ಬಣ್ಣ ಬಳಿದಿದ್ದೇವೆ. ಇದನ್ನು ವೀಕ್ಷಿಸಲು ಬರುವವರಿಗೆ ಅನುಕೂಲವಾಗಲೆಂದು ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಿದ್ದೇವೆ. ಧರ್ಮವೀರ ಸಂಭಾಜಿ ವೃತ್ತದಲ್ಲಿ ವೀಕ್ಷಕರ ಗ್ಯಾಲರಿ ನಿರ್ಮಿಸಿದ್ದೇವೆ.
ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೆರವಣಿಗೆ ಮಾರ್ಗ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ 487 ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರತಿ ಚಟುವಟಿಕೆ ಮೇಲೆ ನಿಗಾ ವಹಿಸಲು 8 ಡ್ರೋನ್ ಕ್ಯಾಮೆರಾ ಬಳಸಲಾಗುತ್ತಿದೆ.
ಬೆಳಗಾವಿ ಮತ್ತು ಬೇರೆ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, 10 ಕೆಎಸ್‌ಆರ್‌ಪಿ ತುಕಡಿ, 8 ಸಿಎಆರ್ ತುಕಡಿ, ರ್‍ಯಾಪಿಡ್ ಆ್ಯಕ್ಷನ್ ಫೋರ್ಸ್ ತಂಡ ಸೇರಿದಂತೆ 3 ಸಾವಿರಕ್ಕೂ ಅಧಿಕ ಮಂದಿ ನಿಯೋಜಿಸಲಾಗಿದೆ’ ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ತಿಳಿಸಿದ್ದಾರೆ.