ಉ.ಕ ಸುದ್ದಿಜಾಲ ಬೆಳಗಾವಿ :

ಉತ್ತರ ಕರ್ನಾಟಕದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಬೆಂಗಳೂರಿನಲ್ಲಿರುವ ಸೆಕ್ರೆಟರಿ ಮಟ್ಟದ ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು. ಈ ಬಗ್ಗೆ ಚಳಿಗಾಲದ ಅಧಿವೇಶನದಲ್ಲೇ ನಿರ್ಧಾರ ಕೈಗೊಳ್ಳಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಬೆಳಗಾವಿ ಚಳಿಗಾಲ ಅಧಿವೇಶನ
ದಲ್ಲಿ ಎಲ್ಲ ಸಚಿವ, ಶಾಸಕರು ಚರ್ಚೆ ನಡೆಸಿ ಈ ಭಾಗದ ಸಮಸ್ಯೆಗೆ ಮುಕ್ತಿ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳಬೇಕು’ ಎಂದೂ ಅವರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

ಅಧಿವೇಶನವು ಗದ್ದಲ, ಗಲಾಟೆಯಲ್ಲಿಯೇ ಮುಗಿದು ಹೋಗುತ್ತದೆ. ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಬೇಕಿದ್ದ ವೇದಿಕೆಯಲ್ಲಿ ಕಾಲಹರಣ ಮಾಡುವುದು ಬೇಡ. ಈ ಸೌಧಲ್ಲಿನ ಚರ್ಚೆಗಳು ಈ ಭಾಗದ ಜ್ವಲಂತ ಸಮಸ್ಯೆಗಳಿಗೆ ವೇದಿಕೆಯಾಗಿ, ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ವೇದಿಕೆಯಾಗಬೇಕು ಎಂದು ಶ್ರೀಗಳು ತಿಳಿಸಿದ್ದಾರೆ.

ಸುವರ್ಣ ವಿಧಾನಸೌಧ ಶಕ್ತಿ ಕೇಂದ್ರ. ಇಡೀ ಸರ್ಕಾರವೇ 10 ದಿನಗಳ ಕಾಲ ಬೆಳಗಾವಿಯಲ್ಲಿ ಇರುತ್ತದೆ. ಪಕ್ಷಾತೀತವಾಗಿ ಉತ್ತರ ಕರ್ನಾಟಕದ ಸಚಿವ, ಶಾಸಕರು ಈ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಅವಶ್ಯಕತೆ ಇದೆ ಎಂದೂ
ಹೇಳಿದ್ದಾರೆ.