ಉ.ಕ ಸುದ್ದಿಜಾಲ ಅಥಣಿ :

ಬೈಕ್ ಸ್ಕಿಡ್ ಆಗಿ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದ ವಿಜಯಪುರ–ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಸಂಬರಗಿ ಗ್ರಾಮದ ಮೋಹನ ಅಶೋಕ ಮೀಸಾಳ (23) ಎಂದು ಗುರುತಿಸಲಾಗಿದೆ. ಮುರಗುಂಡಿ – ಅಥಣಿ ರಸ್ತೆ ಮಧ್ಯೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಮೋಹನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದೇ ಅಪಘಾತದ ತೀವ್ರತೆಗೆ ಕಾರಣವಾಗಿದೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.