ಉ.ಕ ಸುದ್ದಿಜಾಲ ಗೋಕಾಕ :
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ಸೈಪ್ ಮುಲ್ಲಾ (29), ಸಿಜಾ ಮುಲ್ಲಾ (4) ಹಾಗೂ ಇಮ್ತಿಯಾಜ್ ಬಡಗಾಂವ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಜಿಹಾನ್ ಶಾರುಕ್ ಕುಡಚಿಕರ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಡಕಲ್‌ನಿಂದ ಗೋಕಾಕದತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಮತ್ತು ಪೋರ್ಬಸ್ ಶಾಲೆಯಿಂದ ಕೊಣ್ಣೂರಿನತ್ತ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರಲ್ಲಿ ತಂದೆ, ನಾಲ್ಕು ವರ್ಷದ ಮಗಳು ಹಾಗೂ ಅವರ ಸ್ನೇಹಿತ ಸೇರಿದ್ದಾರೆ.
ಅಪಘಾತದ ಬಳಿಕ ಬಸ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
