ಉ.ಕ ಸುದ್ದಿಜಾಲ ಚಿಕ್ಕೋಡಿ :
ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಆಳಕ್ಕೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಟೋಲ್ ಗೇಟ್ ಬಳಿ ನಡೆದಿದೆ.
ಮಲಿಕವಾಡ ಗ್ರಾಮದ ರಾಜೇಂದ್ರ ಶಂಕರ ಪಾಟೀಲ (50) ಮತ್ತು ಶೀಲಾ ಶ್ರೀಪತಿ ಘಾಟೆ (65) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಮಲಿಕವಾಡ ಗ್ರಾಮದ ನಿವಾಸಿಗಳಾದ ಇವರು ತಮ್ಮ ಸೆಂಟ್ರೋ ಕಾರಿನಲ್ಲಿ ಮಲಿಕವಾಡದಿಂದ ಘಟಪ್ರಭಾ ಕಡೆಗೆ ಪ್ರಯಾಣಿಸುತ್ತಿದ್ದರು.
ಕಬ್ಬೂರ ಟೋಲ್ ಗೇಟ್ ಬಳಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತಗ್ಗಿಗೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಕಾರಿನಲ್ಲಿದ್ದ ಮೋಹನ ಘಾಟೆ ಹಾಗೂ ಪ್ರದೀಪ ಘಾಟೆ ಅವರಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ತಕ್ಷಣವೇ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
