ಉ.ಕ ಸುದ್ದಿಜಾಲ ಮೋಳೆ :

ಪ್ರತಿಯೊಂದು ಮಗುವಿನಲ್ಲಿ ಒಂದು ಪ್ರತಿಭೆ ಅಡಗಿರುತ್ತದೆ. ಪ್ರತಿಭೆಗೆ ಬೆಲೆ ಕಟ್ಟಲಾಗದು. ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಇದನ್ನು ಸದುಪಯೋಗಮಾಡಿಕೊಂಡು ವಿದ್ಯಾರ್ಥಿಗಳು ಉನ್ನತ ಸಾಧನೆ  ಮಾಡಬೇಕು ಎಂದು ಮೋಳೆ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ರಾಮು ಮುಂಜೆ ಹೇಳಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತಿ ಅಧ್ಯಕ್ಷ ಬೂತಾಳಿ ಥರಥರೆ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ವ್ಯಕ್ತಿತ್ವ ವಿಕಸನ ಸಾಧ್ಯವಿದೆ. ನಮ್ಮ ಭಾಗದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರ್ತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಇದಕ್ಕೆ ಪಾಲಕ-ಪೋಷಕ ವರ್ಗ, ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಮೋಳೆ ಸಿಆರ್‌ಸಿ ಆರ್ ಬಿ ಲಿಗಾಡಿ ಮಾತನಾಡಿ ನಮ್ಮ ಕ್ಲಸ್ಟರ್‍ನಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿರುವ ಪ್ರತಿಭೆ ಬೆಳೆಸಲು ಕ್ಲಸ್ಟರ್‍ನ ಶಿಕ್ಷಕರು ಪ್ರಯತ್ನಿಸುತ್ತಿದ್ದೇವೆ. ಇದಕ್ಕೆ ಪೂರಕವಾದ ವಾತಾವರಣ ಕಲ್ಪಿಸಿಕೊಡಲಾಗುತ್ತಿದೆ. ಜೊತೆಗೆ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬಿತ್ತುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು ಹಾಗೂ ವಿವಿಧ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.