ಉ.ಕ ಸುದ್ದಿಜಾಲ ಚಿಕ್ಕೋಡಿ :

ಹೊಲಕ್ಕೆ ನೀರು ಹಾಯಿಸಲು ಪಂಪ್‌ಸೆಟ್ ಚಾಲು ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಯುವ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಬೆಳಗಾಬಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ರಮೇಶ್ ಮಲ್ಲಿಕಾರ್ಜುನ ಚೌಗಲಾ (36) ಮೃತಪಟ್ಟವರು. ಇವರು ಹಿರೇಕೋಡಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಚೌಗಲಾ ಅವರ ಪುತ್ರ.

ನನದಿ ಗ್ರಾಮದ ಹದ್ದಿನಲ್ಲಿರುವ ತಮ್ಮ ಕೃಷಿ ಜಮೀನಿನಲ್ಲಿ ಪಂಪ್‌ಸೆಟ್ ಚಾಲು ಮಾಡಲು ರಮೇಶ್ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಗಂಭೀರವಾಗಿ ಅಸ್ವಸ್ಥಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಯುವ ರೈತನ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಹಿರೇಕೋಡಿ ಹಾಗೂ ನನದಿ ಗ್ರಾಮಗಳಲ್ಲಿ ಶೋಕದ ವಾತಾವರಣ ಮೂಡಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.